ಸಮಾಚಾರ

ಲೋಕಸಭೆ ಚುನಾವಣೆಯಲ್ಲಿ ಟಗರು vs ಸಿಂಹ ಕಾಳಗ ಫಿಕ್ಸ್

ಮುಂಬರುವ 2019 ರ ಲೋಕಸಭೆ ಚುನಾವಣೆಗೆ ತಯಾರಿ ನಡೆಸುವ ನಿಟ್ಟಿನಲ್ಲಿ ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಪಕ್ಷದ ಕಾರ್ಯಕಾರಿಣಿ ಸಭೆ ನಡೆಯಲಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಲೋಕಸಭೆಯಲ್ಲಿ ಕಾಂಗ್ರೆಸ್‌ ಮುನ್ನಡೆಸುವುದು ಬಹುತೇಕ ಖಚಿತವಾಗಿದೆ. ಈಗ ಇನ್ನೊಂದು ಸುದ್ದಿ ಹರಿದಾಡುತ್ತಿದ್ದು ಲೋಕಸಭೆಯಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡಲಿದ್ದಾರಾ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಮೂಲಗಳ ಮಾಹಿತಿ ಪ್ರಕಾರ ಸಿದ್ದರಾಮಯ್ಯ ಅವರಿಗೆ ಮೈಸೂರಿನಲ್ಲಿ ಸ್ಪರ್ಧೆ ಮಾಡಿ ಎಂದು ಹೈ ಕಮಾಂಡ್ ಒತ್ತಾಯ ಮಾಡುತ್ತಿದೆ ಎನ್ನಲಾಗಿದೆ. ಇದಕ್ಕೆ ಸಿದ್ದರಾಮಯ್ಯ ಯಾವ ಪ್ರತಿಕ್ರಿಯೆ ನೀಡುತ್ತಾರೆ ಕಾದು ನೋಡಬೇಕಿದೆ. ಸಿದ್ದರಾಮಯ್ಯ ಅವರು ಸ್ಪರ್ಧೆಗೆ ಒಪ್ಪಿದರೆ ಈ ಕ್ಷೇತ್ರ ಕುತೂಹಲ ಮೂಡಿಸಲಿದೆ.

 

 

ಸದ್ಯ ಪ್ರತಾಪ ಸಿಂಹ ಮೈಸೂರು-ಕೊಡಗು ಸಂಸದರಾಗಿದ್ದು ಇವರ ವಿರುದ್ದ ಸಿದ್ದರಾಮಯ್ಯ ಸ್ಪರ್ಧೆಗೆ ಇಳಿದರೆ ಕ್ಷೇತ್ರ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗುವುದರಲ್ಲಿ ಎರಡು ಮಾತಿಲ್ಲ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದ್ದು, ಸಭೆಯಲ್ಲಿ ಹಾಜರಿದ್ದವರು ಸಹ ಸಿದ್ದರಾಮಯ್ಯ ರವರು ಸ್ಪರ್ಧಿಸಬೇಕೆಂದು ಅಭಿಪ್ರಾಯಪಟ್ಟಿದ್ದಾರೆ. ಹಾಗಾಗಿ ವೇಣುಗೋಪಾಲ್ ಅವರು ವಿಷಯವನ್ನು ದೆಹಲಿಯಲ್ಲಿ ಚರ್ಚೆ ಮಾಡಲಿದ್ದಾರೆ ಎನ್ನಲಾಗಿದೆ.

ಕಳೆದ ಬಾರಿ ಪ್ರತಾಪ್ ಸಿಂಹ ಅವರು ಸುಮಾರು 30 ಸಾವಿರ ಮತಗಳ ಅಂತರದಿಂದ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ವಿಶ್ವನಾಥ ಅವರ ವಿರುದ್ಧ ಗೆದ್ದಿದ್ದರು. ಈ ಬಾರಿ ಕಾಂಗ್ರೆಸ್ ಹಾಗು ಜೆಡಿಎಸ್ ಒಂದಾಗಿರುವುದರಿಂದ ಅವರಿಗೆ ಕಠಿಣ ಸವಾಲು ಎದುರಾಗಿದೆ ಎಂದು ತಿಳಿದು ಬಂದಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top